ರಾಜ್ಯದಲ್ಲಿ ಆತಂಕ ಸೃಷ್ಟಿಸಿದ್ದ ಡೆಂಘೀ ಪ್ರಕರಣ ನಿಯಂತ್ರಿಸಲು ಕ್ರಮ ಕೈಗೊಂಡಿರುವ ರಾಜ್ಯ ಸರಕಾರ ಇದನ್ನು ಸಾಂಕ್ರಾಮಿಕ ರೋಗ ಎಂದು ಘೋಷಣೆ ಮಾಡಿದೆ. ಅಲ್ಲಲ್ಲಿ ಡೆಂಘೀ ಪ್ರಕರಣಗಳು ಹೆಚ್ಚುತ್ತಿದ್ದು ಸಾವಿನ ಸಂಖ್ಯೆಯೂ ಏರಿಕೆಯಾಗಿದೆ.
ಮಂಗಳವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಡೆಂಘೀ ಸಾಂಕ್ರಾಮಿಕ ರೋಗ ಎಂದು ಘೋಷಿಸುವುದರ ಜೊತೆಗೆ ಡೆಂಘೀ ನಿಯಂತ್ರಣ ಮಾರ್ಗಸೂಚಿಗಳನ್ನು ಪಾಲಿಸದವರಿಗೆ ದಂಡ ಕೂಡ ಹಾಕಲಾಗುವುದು ಎಂದು ತಿಳಿಸಿದರು.
ಇದರಿಂದ ಆರೋಗ್ಯ ಇಲಾಖೆಗೆ ಡೆಂಘೀ ಸೊಳ್ಳೆ ಉತ್ಪತ್ತಿ ತಾಣಗಳನ್ನು ಹತೋಟಿಗೆ ತರುವ ನಿಟ್ಟಿನಲ್ಲಿ ಕಾನೂನಿನ ಅಸ್ತ್ರ ಬಳಸಬಹುದಾಗಿದೆ. ಈ ಹಿಂದೆ ಬೆಂಗಳೂರು ಮತ್ತು ಮಂಗಳೂರು ಬಿಟ್ಟರೆ ರಾಜ್ಯದ ಬೇರೆ ಪ್ರದೇಶಗಳಲ್ಲಿ ಕಾನೂನಿನ ರೀತಿ ಕ್ರಮ ಕೈಗೊಳ್ಳಲು ಅವಕಾಶವಿರಲಿಲ್ಲ ಎಂದು ಹೇಳಿದರು.
ಈಡಿಸ್ ಸೊಳ್ಳೆಗಳ ಲಾರ್ವ ಉತ್ಪತ್ತಿಗೆ ಅನುಕೂಲವಾಗುವಂತೆ ನೀರು ಸಂಗ್ರಹವಾಗಬಾರದು. ಈ ನಿಟ್ಟಿನಲ್ಲಿ ಎಲ್ಲರೂ ಎಚ್ಚರಿಕೆ ವಹಿಸುವುದು ಮುಖ್ಯ. ದಂಡ ವಿಧಿಸುವುದಕ್ಕಿಂತ ಜನರು ಡಿಂಗಿ ವಿಚಾರದಲ್ಲಿ ಜವಾಬ್ದಾರಿಯುತವಾಗಿ ಮುನ್ನೆಚ್ಚರಿಕೆ ವಹಿಸಲಿ ಎಂಬ ಉದ್ದೇಶದಿಂದ ರಾಜ್ಯ ಸರ್ಕಾರ ರಾಜ್ಯ ಪತ್ರ ಹೊರಡಿಸಿದೆ. ಜಿಲ್ಲಾಧಿಕಾರಿಗಳಿಗೆ ನಿಯಮ ಜಾರಿಗೊಳಿಸುವ ಅಧಿಕಾರ ನೀಡಲಾಗಿದೆ.
ನಿಯಮ ಮೀರಿದರೆ ದಂಡ
ಡೆಂಘೀ ಮಾರ್ಗಸೂಚಿಗಳನ್ನು ಪಾಲಿಸದಿದ್ದರೆ, ಗ್ರಾಮೀಣ ಪ್ರದೇಶದ ಮನೆಗಳಿಗೆ 200 ರೂ. ಹಾಗೂ ನಗರ ಪ್ರದೇಶಗಳಲ್ಲಿ 400 ರೂ. ದಂಡ ವಿಧಿಸಲಾಗುವುದು. ಅಲ್ಲದೆ ಶಾಲಾ-ಕಾಲೇಜು, ಹೋಟೆಲ್, ಲಾಡ್ಜ್, ರೆಸಾರ್ಟ್ಗಳು ಸೇರಿದಂತೆ ವಾಣಿಜ್ಯ ಸಂಘ, ಸಂಸ್ಥೆಗಳಿಗೆ ಗ್ರಾಮೀಣ ಪ್ರದೇಶಗಳಲ್ಲಿ 500 ರೂಂ. ಹಾಗೂ ನಗರ ಪ್ರದೇಶಗಳಲ್ಲಿ 1000 ರೂ. ದಂಡ ನಿಗದಿಪಡಿಸಲಾಗಿದೆ. ಕಟ್ಟಡ ನಿರ್ಮಾಣ, ಹೊರಾಂಗಣ ಸ್ಥಳಗಳಲ್ಲಿ ಗ್ರಾಮೀಣ ಪ್ರದೇಶಗಳಿಗೆ 1000 ರೂ. ನಗರ ಪ್ರದೇಶಗಳಲ್ಲಿ 2000 ರೂ. ದಂಡ ವಿಧಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.